ಕೊವಿಡ್ ನಿಯಮ ಉಲ್ಲಂಘಿಸಿರುವ ಬಿಜೆಪಿ ಮುಖಂಡರ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ಧವೇ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಅವರನ್ನು ಭೇಟಿ ಮಾಡಿದ್ದೇವೆ. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದ್ದರಿಂದ ಅಧಿಕಾರಿಗಳು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕೇವಲ ನಮ್ಮ ಪಕ್ಷದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಆಡಳಿತ ಪಕ್ಷದವರ ವಿರುದ್ದ ಪ್ರಕರಣ ದಾಖಲಿಸದಿದ್ದರೆ ನಾವು ಸುಮ್ಮನೆ ಕೂರುವುದಿಲ್ಲ. ಹೋರಾಟ ನಡೆಸುತ್ತೇವೆ ಎಂದು ತಿಳಿಸಿದರು.
ಈ ವಿಷಯವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಮಾತನಾಡಿದ್ದೇನೆ. ಸಿಎಂ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೇಳಿದ್ದೇವೆ. ಮುಖ್ಯಕಾರ್ಯದರ್ಶಿ ಕೊವಿಡ್ ನಿಯಮ ಉಲ್ಲಂಘಿಸಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿದ್ದಾರೆ. ಪ್ರಕರಣ ದಾಖಲಿಸುವುದು ಉಪ ಆಯುಕ್ತರಿಗೆ ಬಿಟ್ಟ ವಿಚಾರ ಎಂದರು.
ಬಿಜೆಪಿಯಲ್ಲೇ ಕೊವಿಡ್ ನಿರ್ಬಂಧದ ಬಗ್ಗೆ ಗೊಂದಲವಿದೆ. ಅವರು ಜನರ ಪ್ರಾಣ ತೆಗೆಯುತ್ತಿದ್ದಾರೆ. ವ್ಯಾಪಾರ ವಹಿವಾಟಿಗೆ ತೊಂದರೆಯಾಗಿದೆ. ಹೈದರಾಬಾದ್ ನಲ್ಲಿ ಯಾವುದೇ ನಿರ್ಬಂಧವಿಲ್ಲ. ಬಡವರ ಸಂಪಾದನೆಗೆ ಅಡ್ಡಿಯಾಗಿದ್ದಾರೆ. ಬಡ್ಡಿ ಮನ್ನ ಮಾಡುತ್ತಾರೆ. ಬಾಡಿಗೆ ಮನ್ನ ಮಾಡುತ್ತಾರ? ಎಂದು ಪ್ರಶ್ನಿಸಿದರು.
ಯುವ ಕಾಂಗ್ರೆಸ್ ನಲ್ಲಿ ಗಲಾಟೆ ನಡೆದಿಲ್ಲ. ಈ ಘಟನೆಯ ಹಿಂದ ನಲಪಾಡ್ ಇಲ್ಲ, ಬೇರೆ ಯಾರೂ ಇಲ್ಲ. ಶಿಸ್ತು ಉಲ್ಲಂಘಿಸಿದ್ದರೆ ಕ್ರಮ ಕೈಗೊಳ್ಳುತ್ತೇವೆ. ಆದರೆ ವೈಯಕ್ತಿಕ ವಿಚಾರದಲ್ಲಿ ತಲೆ ಹಾಕುವುದಿಲ್ಲ ಎಂದು ಹೇಳಿದರು.


