ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ, ಪಕ್ಷ ಕಟ್ಟುವ ಧಂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ ನೀವಾ ಜೆಡಿಎಸ್ ಬಗ್ಗೆ ಮಾತನಾಡುವುದು? ಎಂದು ಲೇವಡಿ ಮಾಡಿದ್ದಾರೆ.
ತುಮಕೂರಿನಿಂದ ಜೆಡಿಎಸ್ ಅನ್ನು ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಕಾಂಗ್ರೆಸ್ ಪಿತ್ರಾರ್ಜಿತ ಆಸ್ತಿಯಾ? ಚಾಮುಂಡೇಶ್ವರಿ ಕ್ಷೇತ್ರದಿಂದ ನಿಮ್ಮನ್ನು ಜನರು ಓಡಿಸಿದ್ದು ಮರೆತುಬಿಟ್ಟಿರಾ? ಈ ಸಲ ಬಾದಾಮಿ ಕ್ಷೇತ್ರದಿಂದಲೂ ಒಡಬೇಕಾಗುತ್ತದೆ ಕಾಯಿರಿ ಎಂದು ಆಕ್ರೋಶ ಹೊರಹಾಕಿದ್ದಾರೆ.
ಕಾಂಗ್ರೆಸ್ ಸೇರುವ ಮುನ್ನ ನೀವು ಯಾರ ಬಾಲಂಗೋಚಿ ಆಗಿದ್ದಿರಿ? ಗುರುಸ್ವಾಮಿ ಅವರೆದುರು ಸೋತು ಸುಣ್ಣವಾದ ಮೇಲೆ ಅನುಗ್ರಹಕ್ಕೆ ಬಂದು ಯಾರ ಮುಂದೆ ಗಳಗಳನೆ ಅತ್ತು ರಾಜಕೀಯ ಬಿಟ್ಟು ವಕೀಲಿ ಮಾಡುತ್ತೇನೆ ಎಂದಿರಿ ಅನ್ನುವುದು ನೆನಪಿದೆಯಾ ಸಿದ್ದರಾಮಯ್ಯ? ಆಗ ನಿಮಗೆ ಬಾಲಂಗೋಚಿತನ ನೆನಪಾಗಲಿಲ್ಲವೇ? ಎಂದು ಗೇಲಿ ಮಾಡಿದ್ದಾರೆ.
ರಾಜ್ಯ ಸರ್ಕಾರಕ್ಕೆ ಜೆಡಿಎಸ್ ಬೆಂಬಲ ನೀಡುತ್ತಿದೆ ಎನ್ನುವ ನಿಮ್ಮ ಸುಳ್ಳು ನಾಲಗೆ, ಅದೇ ಸರ್ಕಾರ ಬರಲು ಮೂಲ ಕಾರಣರಾದ ಸಿದ್ದಪುರುಷ ಯಾರು ಎನ್ನುವುದನ್ನು ಹೇಳಲಿಲ್ಲವೇ? ಪಕ್ಷದ್ರೋಹ ತಾಯಿಗೆ ಸಮಾನ. ನಿಮ್ಮ ದ್ರೋಹ ಮುಚ್ಚಿಟ್ಟುಕೊಳ್ಳಲು ಜೆಡಿಎಸ್ ಜಪವಾ ಸಿದ್ದರಾಮಯ್ಯ ಎಂದು ಪ್ರಶ್ನೆ ಕೇಳಿದ್ದಾರೆ.
ಮತ್ತೆ ಮುಖ್ಯಮಂತ್ರಿ ಆಗಬೇಕೆನ್ನುವ ದುರಾಶೆ, ಅವಕಾಶ ಸಿಗದೆನ್ನುವ ಹತಾಶೆ, ಅಭ್ಯರ್ಥಿಗಳಿಲ್ಲ, ಜೆಡಿಎಸ್ ಬಿಟ್ಟರೆ ಗತಿ ಇಲ್ಲ ನಿಮ್ಮ ಯೋಗ್ಯತೆಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಪರೇಷನ್ ಹಸ್ತವೂ ಸಿದ್ದಾಂತವೇ? ಆಶ್ರಯ ಕೊಟ್ಟ ಪಕ್ಷವನ್ನು ಅಲ್ಲಿನ ಮೂಲನಿವಾಸಿಗಳನ್ನು ಮುಗಿಸುವುದೇ ಸಿದ್ದಾಂತವೇ? ನೀವು ಜೆಡಿಎಸ್ ಸಿದ್ದಾಂತದ ಬಗ್ಗೆ ಮಾತನಾಡುತ್ತೀರಿ? ನಾಚಿಕೆ ಆಗಬೇಕು ನಿಮಗೆ. ಸುಳ್ಳು ನಿಮ್ಮ ರಾಜಕೀಯದ ಅಡಿಪಾಯ, ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ, ಸುಳ್ಳು ಸುಳ್ಳೇ ನಿಮ್ಮ ನರಿಬುದ್ದಿ ಅವಕಾಶವಾದಿ ರಾಜಕಾರಣ ನಿಜಸ್ವರೂಪ, ವಿನಾಶಕಾಲೇ ವಿಪರೀತಿ ಸುಳ್ಳ ಎಂದು ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದಾರೆ.