ಬಹುಪಯೋಗಿ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ನಮ್ಮ ನೀರು, ನಮ್ಮ ಹಕ್ಕು ಪಾದಯಾತ್ರೆ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಸುವ ಮೂಲಕ ತೆರೆಬಿದ್ದಿದೆ.ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರು ಮೇಕೆದಾಟುವಿನಿಂದ ಬೆಂಗಳೂರಿಗೆ ಎರಡು ಹಂತಗಳಲ್ಲಿ ಪಾದಯಾತ್ರೆ ನಡೆಸಿದರು.
ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ್ ಮಾತನಾಡಿ ಈ ಯೋಜನೆ ಜಾರಿಯಿಂದ ಸುಮಾರು 2 ಕೋಟಿ ಜನರಿಗೆ ಕುಡಿಯುವ ನೀರು ದೊರೆಯಲಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಲಭ್ಯವಾಗಲಿದೆ. ಹಾಗೆಯೇ ವಿದ್ಯುತ್ ಉತ್ಪಾದನೆಗೂ ಸಹಕಾರಿಯಾಗಲಿದೆ ಎಂದು ವಿವರಿಸಿದರು. ರಾಜ್ಯ ಮತ್ತು ಕೇಂದ್ರದಲ್ಲಿ ಡಬಲ್ ಇಂಜಿನ್ ಸರ್ಕಾರವಿದ್ದರೂ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ಬಿಜೆಪಿ ಸರ್ಕಾರ ಮೀನಾಮೇಷ ಎಣಿಸುತ್ತಿವೆ ಎಂದು ದೂರಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆಯನ್ನು ಹತ್ತಿಕ್ಕಲು ಬಿಜೆಪಿ ಸರ್ಕಾರ ಪ್ರಯತ್ನಿಸಿತು. ನಾವು ಮೇಕೆದಾಟು ಯೋಜನೆಯ ವಿಷಯದಲ್ಲಿ ರಾಜಕೀಯ ಮಾಡುತ್ತಿಲ್ಲ. ಇದು ಜನರ ಪಾದಯಾತ್ರೆ. ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗಲಿದೆ. ಹಾಗಾಗಿ ಕೇಂದ್ರ ಸರ್ಕಾರ ಈ ಯೋಜನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.
ಲೋಕಸಭೆಯ ಪ್ರತಿಪಕ್ಷ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಕೆದಾಟು ಯೋಜನೆಯ ಡಿಪಿಆರ್ ಮಾಡಿಸಿದರು. ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಮತ್ತು ಎಂ.ಬಿ.ಪಾಟೀಲ್ ಯೋಜನೆಯ ರೂಪುರೇಷೆಗಳನ್ನು ತಯಾರಿಸಿ ಕೇಂದ್ರಕ್ಕೆ ಕಳಿಸಿದರು. ಆದರೂ ಕೇಂದ್ರದ ಬಿಜೆಪಿ ಸರ್ಕಾರ ಈ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಲು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು.
ಸಿರಾ ತಾಲೂಕಿನ ಸಂಜಾವಧೂತ ಸ್ವಾಮಿಗಳು ಮತ್ತು ವಚನಾನಂದ ಸ್ವಾಮೀಜಿ ಪಾಲ್ಗೊಂಡು ಮಾತನಾಡಿ ಈ ಪಾದಯಾತ್ರೆ ಕುಡಿಯುವ ನೀರಿಗೆ ಸಂಬಂಧಿಸಿದ್ದು, ಯಾವುದೇ ಪಕ್ಷದ ಪರವಾದ ಹೋರಾಟವಲ್ಲ. ಕುಡಿಯುವ ನೀರು ದಕ್ಷಿಣ ಕರ್ನಾಟಕದ ಏಳೆಂಟು ಜಿಲ್ಲೆಗಳಿಗೆ ದೊರೆಯಲಿದೆ. ಪಕ್ಷಾತೀತವಾದ ಹೋರಾಟಕ್ಕೆ ನಾವು ಬೆಂಬಲ ನೀಡಿದ್ದೇವೆ ಎಂದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಹಮ್ಮಿಕೊಂಡ ಪಾದಯಾತ್ರೆಗೆ ಪಕ್ಷಾತೀತವಾಗಿ ಭಾಗವಹಿಸಿದ್ದಾರೆ. ಜನರ ಪಾದಯಾತ್ರೆಯಲ್ಲಿ ಭಾಗವಹಿಸಿದ ಜನರಿಗೆ ಕುಡಿಯುವ ನೀರು, ಊಟ, ತಂಪುಪಾನೀಯ ನೀಡಿ ನೆರವು ನೀಡಿದ್ದು ಅವರನ್ನು ಈ ಸಂದರ್ಭದಲ್ಲಿ ಸ್ಮರಿಸಲೇಬೇಕಾಗಿದೆ ಎಂದು ತಿಳಿಸಿದರು.