ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ತಂತ್ರಗಾರಿಕೆ ನಡೆಸುವುದು ಸರ್ವೇಸಾಮಾನ್ಯ. ಆದರೆ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಅವರು ಭೇಟಿ ನೀಡುತ್ತಿರುವುದು ಚುನಾವಣೆ ತಂತ್ರಗಾರಿಕೆಯ ಭಾಗವಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದಗಂಗಾ ಮಠದ ಬಗ್ಗೆ ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾಗಾಂಧಿ ಅವರಿಗೆ ಅಪಾರವಾದ ಗೌರವವಿದೆ. ಅದನ್ನು ವ್ಯಕ್ತಪಡಿಸುವ ನಿಟ್ಟಿನಲ್ಲಿ ಈ ಭೇಟಿ ಮಾಡುತ್ತಿದ್ದಾರೆ ಎಂದು ಹೇಳಿದರು.
ತುಮಕೂರು ಜಿಲ್ಲೆಯಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡರು ಸೇರಿದಂತೆ ಯಾವ ಮುಖಂಡರನ್ನು ಕಡೆಗಣಿಸಿಲ್ಲ. ಮುದ್ದಹನುಮೇಗೌಡರು ಕೃಷಿಯಲ್ಲಿ ತೊಡಗಿದ್ದಾರೆ. ಜೊತೆಗೆ ವಕೀಲರಾಗಿ ಕೂಡ ಸಕ್ರಿಯರಾಗಿದ್ದಾರೆ. ಹಾಗಾಗಿ ಪಕ್ಷದ ವೇದಿಕೆಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿಲ್ಲ. ಮುಂದಿನ ದಿನಗಳಲ್ಲಿ ಪಕ್ಷದೊಂದಿಗೆ ಸಕ್ರಿಯರಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಮಾತನಾಡಿ, ವಸ್ತ್ರ ಧರಿಸುವಿಕೆ ವ್ಯಕ್ತಿಯಿಂದ ವ್ಯಕ್ತಿಗೆ ಹೇಗೆ ಭಿನ್ನವಾಗಿರುತ್ತದೆ ಎಂಬುದನ್ನು ಸ್ವಾಮೀಜಿಗಳ ಉದಾಹರಣೆ ನೀಡಿ ಹೇಳಿದ್ದಾರೆ. ಆದರೆ ಕೆಲ ಮಾಧ್ಯಮಗಳು ಅವರ ಹೇಳಿಕೆಯನ್ನು ತಿರುಚಿ ಸ್ವಾಮೀಜಿಗಳಿಗೆ ಅವಮಾನ ಎಂದು ಬಿಂಬಿಸಲು ಹೊರಟಿವೆ. ಇದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದರು.
ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಶಾಸಕರಾದ ಡಾ.ಎಸ್.ರಫೀಕ್ ಅಹಮದ್, ಎಸ್. ಷಫಿ ಅಹಮದ್, ವಿಧಾನಪರಿಷತ್ ಸದಸ್ಯ ರಾಜೇಂದ್ರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಇದ್ದರು.