Saturday, October 19, 2024
Google search engine
Homeಮುಖಪುಟತುಮಕೂರು - ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ತುಮಕೂರು – ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಶಾಸಕ ಡಾ.ರಫೀಕ್ ಅಹಮದ್, ಇಂಧನ ಬೆಲೆ ಹೆಚ್ಚಳದಿಂದ ಮನೆ ನಿರ್ಮಾಣಕ್ಕೆ ಅಗತ್ಯವಿರುವ ವಸ್ತುಗಳಾದ ಇಟ್ಟಿಗೆ, ಸೀಮೆಂಟ್, ಕಬ್ಬಿಣದ ಬೆಲೆ ಜನಸಾಮಾನ್ಯರ ಕೈಗೆಟುಕದಂತೆ ಹೆಚ್ಚಾಗಿದೆ. ಇದರಿಂದ ಬಡವರು ಒಂದು ಸೂರು ಹೊಂದಬೇಕೆಂಬ ಆಸೆ ಮರೀಚಿಕೆಯಾಗಿದೆ ಎಂದು ಹೇಳಿದರು.

ಹತ್ತು ಹಲವು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಏಪ್ರಿಲ್ 11ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಂಡಿದೆ. ಈ ಸಮಾವೇಶಕ್ಕೆ ತುಮಕೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಮುಂದಿನ ದಿನಗಳಲ್ಲಿ ತಾಲೂಕು ಮತ್ತು ಹೋಬಳಿ ಮಟ್ಟಕ್ಕೂ ಹೋರಾಟವನ್ನು ಕೊಂಡೊಯ್ಯಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿ, ಐದು ರಾಜ್ಯಗಳ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಇಂಧನ ಬೆಲೆಯನ್ನು ಐದು ತಿಂಗಳ ಕಾಲ ಸ್ಥಗಿತಗೊಳಿಸಿದ್ದ ಕೇಂದ್ರ ಸರ್ಕಾರ ಫಲಿತಾಂಶ ಬಂದ ಬಳಿಕ ನಿರಂತರವಾಗಿ ಇಂಧನ ಬೆಲೆಗಳನ್ನು ಏರಿಕೆ ಮಾಡುತ್ತಲೇ ಬರುತ್ತಿದೆ. ಇದು ಬಿಜೆಪಿ ಸರ್ಕಾರದ ದ್ವಂದ್ವ ನಿಲುವನ್ನು ತೋರಿಸುತ್ತದೆ ಎಂದು ಆರೋಪಿಸಿದರು.

ಇಂಧನ ಬೆಲೆಗಳನ್ನು ಜನಸಾಮಾನ್ಯರ ಕೈಗೆ ಎಟುಕದಂತೆ ಮಾಡಿರುವ ಕೇಂದ್ರ ಸರ್ಕಾರ ಅಡುಗೆ ಅನಿಲ 1100 ರೂಗಳ ಗಡಿ ದಾಟುವಂತೆ ಮಾಡಿದೆ. ಇದಕ್ಕೆ ಪೂರಕವೆಂಬಂತೆ ಅಡುಗೆ ಎಣ್ಣೆ, ಬೇಳೆ, ಅಕ್ಕಿ ಬೆಲೆಯೂ ಹೆಚ್ಚಳವಾಗಿದೆ. ಸಾಮಾನ್ಯರು ಬದುಕು ನಡೆಸುವುದು ದುಸ್ತರವಾಗಿದೆ ಎಂದು ಟೀಕಿಸಿದರು.

ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಜನರ ಮನಸ್ಸನ್ನು ಬೇರೆ ಕಡೆ ಸೆಳೆಯುವ ಉದ್ದೇಶದಿಂದ ಹಿಜಾಬ್, ಹಲಾಲ್ ಕಟ್, ಆಜಾನ್ ನಂತಹ ಧಾರ್ಮಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಕೋಮು ಸೌಹಾರ್ದತೆಯನ್ನು ಹಾಳುಗೆಡವುತ್ತಿದೆ. ಇದರ ವಿರುದ್ದ ಹೋರಾಟ ಮುಂದುವರೆಯಲಿದೆ ಎಂದರು.

ದೇಶದಲ್ಲಿ ಹಲಾಲ್ ಕಟ್ ಮಾಂಸ ತಿಂದು ಸಾವನ್ನಪ್ಪಿರುವ ನಿದರ್ಶನಗಳಿಲ್ಲ. ಒಂದು ಧರ್ಮದವರನ್ನು ಗುರಿಯಾಗಿಟ್ಟುಕೊಂಡು ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡುವ ಪ್ರಯತ್ನ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರ ದಲಿತರ ಮೀಸಲಾತಿಯನ್ನು ಸದ್ದಿಲ್ಲದೆ ತೆಗೆಯುವ ಪ್ರಯತ್ನ ಮಾಡುತ್ತಿದೆ. ಇದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಘಟಕಗಳ ಮುಖಂಡರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular