ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಮತ್ತು ಹಿಂದುಳಿದ ವರ್ಗಗಳ ಆಯೋಗ ನೀಡಿರುವ ವರದಿಗಳ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಚುನಾವಣೆ ನಡೆಸಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗವನ್ನು ನೇಮಕ ಮಾಡಿದ್ದೇವೆ. ಅದು ನೀಡುವ ವರದಿಯನ್ನು ಆಧರಿಸಿ ಹಿಂದುಳಿದವರಿಗೆ ಮೀಸಲಾತಿಯನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿಪಕ್ಷ ನಾಯಕರು ಕೂಡ ನನಗೆ ಒಂದು ಪತ್ರವನ್ನು ಬರೆದಿದ್ದಾರೆ. ಸಂವಿಧಾನದ ಪ್ರಕಾರ ಹಿಂದುಳಿದವರಿಗೆ ರಾಜಕೀಯ ಮೀಸಲಾತಿ ನೀಡುತ್ತ ಬರುತ್ತಿದ್ದೇವೆ. ಆದರೆ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆಯೇ ಮತ್ತು ಇಲ್ಲವೇ ಎಂಬುದನ್ನು ಪರಿಶೀಲಿಸಲು ಬ್ಯಾಕ್ ವರ್ಡ್ ಕಮಿಷನ್ ರಚಿಸಲಾಗಿದೆ. ಅದು ನೀಡುವ ವರದಿಯನ್ನಾಧರಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ಬ್ಯಾಕ್ ವರ್ಡ್ ಕಮಿಷನ್, ಸುಪ್ರೀಂಕೋರ್ಟ್ ತೀರ್ಪು ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿರುವ ಪತ್ರವನ್ನಾಧರಿಸಿ ಕ್ರಮ ಕೈಗೊಳ್ಳಲು ತಜ್ಞರ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ. ಸಭೆಯಲ್ಲಿ ಕಾನೂನು ಸಚಿವರು ಮತ್ತು ಸಂಬಂಧ ಪಟ್ಟ ಸಚಿವರು ಭಾಗಿಯಾಗುವರು ಎಂದರು.
ಇತರೆ ಹಿಂದುಳಿದ ವರ್ಗಗಳಿಗೆ ಆಧ್ಯತೆ ನೀಡುವ ದೃಷ್ಟಿಯಲ್ಲಿಕೊಂಡು ಚುನಾವಣೆ ನಡೆಸಲು ಸಿದ್ದರಿದ್ದೇವೆ. ಒಬಿಸಿಗಳಿಗೆ ಆದ್ಯತೆ ನೀಡಬೇಕೆಂಬುದು ಎಲ್ಲಾ ರಾಜಕೀಯ ಪಕ್ಷಗಳ ಇಚ್ಛೆಯಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ರಾಜಕೀಯ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಯಾವ್ಯಾವ ಜಾತಿಗೆ ಎಷ್ಟು ಮೀಸಲಾತಿ ಸಿಕ್ಕಿದೆ ಎಂಬುದನ್ನು ಪರಿಶೀಲಿಸಿ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ನೀಡುವುದಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.