2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಮೊದಲ ಸ್ಥಾನ ಪಡೆದಿದ್ದರೆ, ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಈ ಬಾರಿ 6,83, 563 ವಿದ್ಯಾರ್ಥಿಗಳು ಪರೀಕ್ಷ ಬರೆದಿದ್ದರು. ಇವರ ಪೈಕಿ 4, 22,966 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು 68.72ರಷ್ಟು ಮಂದಿ ತೇರ್ಗಡೆಯಾಗಿದ್ದರೆ, ಬಾಲಕರು 55.22ರಷ್ಟು ಮಂದಿ ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 72.53ರಷ್ಟು ಫಲಿತಾಂಶ ದಾಖಲಾಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 64.97ರಷ್ಟು ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ 48.97ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದರು.
ಎಂದಿನಂತೆ ದಕ್ಷಿಣ ಕನ್ನಡ ಜಿಲ್ಲೆ 88.02ರಷ್ಟು ಫಲಿತಾಂಶವನ್ನು ಪಡೆದು ಮೊದಲ ಸ್ಥಾನದಲ್ಲಿದ್ದರೆ, ಉಡುಪಿ 86.38ರಷ್ಟು ಫಲಿತಾಂಶ ದಾಖಲಿಸಿ ಎರಡನೇ ಸ್ಥಾನ ಪಡೆದುಕೊಂಡಿದೆ. ವಿಜಯಪುರ 77.14ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಮೂರನೇ ಸ್ಥಾನ ಪಡೆದುಕೊಂಡಿದೆ. ಚಿತ್ರದುರ್ಗ ಜಿಲ್ಲೆ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಎಲ್ಲಾ ವಿಭಾಗಗಳಿಂದಲೂ ಸೇರಿ 91,169 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. 2,14,155 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. 68,444 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದಿದ್ದಾರೆ.
49, 301 ವಿದ್ಯಾರ್ಥಿಗಳು ಶೇ.50ಕ್ಕಿಂತ ಕಡಿಮೆ ಅಂಕಗಳನ್ನು ಪಡೆದು ತೇರ್ಗಡೆ ಹೊಂದಿದ್ದಾರೆ ಎಂದು ನಾಗೇಶ್ ತಿಳಿಸಿದ್ದಾರೆ.
ಗ್ರಾಮಾಂತರ ಭಾಗದಲ್ಲಿ ಶೇ.62.18 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, ನಗರ ಪ್ರದೇಶದಲ್ಲಿ ಶೇ.61.78ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ.