ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಕರೆ ನೀಡಿರುವ ಭಾರತ್ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಭಾರತ್ ಬಂದ್ ಕಾವು ತೀವ್ರ ಸ್ವರೂಪ ಪಡೆದುಕೊಂಡಿದೆ.
ಭಾರತ್ ಬಂದ್ ಹಿನ್ನೆಲೆಯಲ್ಲಿ ದೇಶಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ನೋಯ್ಡಾದಲ್ಲಿ 144 ಸೆಕ್ಷನ್ ವಿಧಿಸಿದ್ದರೂ ಈ ಮಾರ್ಗದಲ್ಲಿ ಭಾರೀ ವಾಹನ ದಟ್ಟಣೆ ಹೆಚ್ಚಾಗಿದೆ. ದೆಹಲಿಯ ಗುರ್ ಗಾಂವ್ ನಲ್ಲಿ ಪೋಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಬಿಹಾರ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಕೇರಳ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆಯಾದರೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ತೀವ್ರ ನಿಗಾ ಇರಿಸಿದ್ದಾರೆ. ಜಾರ್ಖಂಡ್ ನಲ್ಲಿ ಶಾಲೆಗಳನ್ನು ಮುಚ್ಚಲು ಆದೇಶಿಸಲಾಗಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ 9 ಮತ್ತು 11ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಅಗ್ನಿಪಥ ಯೋಜನೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸುಮಾರು 530 ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಇದರಲ್ಲಿ 348 ಪ್ಯಾಸೆಂಜರ್ ರೈಲುಗಳ ಮತ್ತು 181 ಮೇಲ್/ಎಕ್ಸ್ ಪ್ರೆಸ್ ರೈಲುಗಳು ಸೇರಿವೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ನಾಲ್ಕು ಮೇಲ್/ಎಕ್ಸ್ ಪ್ರೆಸ್ ರೈಲುಗಳ ಮತ್ತು ಆರು ಪ್ಯಾಸೆಂಜರ್ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ.
ಸೋಮವಾರ ಜಂತರ್ ಮಂತರ್ ನಲ್ಲಿ ಸತ್ಯಾಗ್ರಹ ನಡೆಸಲು ಕಾಂಗ್ರೆಸ್ ಮುಖಂಡರು ಜಮಾಯಿಸಿದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕನ್, ಅಗ್ನಿಪಥ ಯೋಜನೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದೇವೆ. ಈ ಸಂಬಂಧ ರಾಷ್ಟ್ರಪತಿಗಳನ್ನು ಮಾಡಲಾಗುವುದು ಎಂದು ಹೇಳಿದರು.
ಈ ಯೋಜನೆಯನ್ನು ಮೊದಲು ಯುಜನರೊಂದಿಗೆ ಮತ್ತು ಸಂಸತ್ತಿನಲ್ಲಿ ಚರ್ಚಿಸಬೇಕು ಎಂದು ಮಾಧ್ಯಮಗಳೊಂದಿಗೆ ತಿಳಿಸಿದರು. ಸೇನಾ ನಾಯಕತ್ವವು ಭಾನುವಾರ ಅಗ್ನಿಪಥ ಯೋಜನೆಯನ್ನು ಹಿಂತೆಗೆದುಕೊಳ್ಳುವುದನ್ನು ತಳ್ಳಿಹಾಕಿತ್ತು.