ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ನೀಡಿರುವ ಹೇಳಿಕೆಯಿಂದ ಅವರ ಅಭಿಮಾನಿಗಳು, ಕಾರ್ಯಕರ್ತರು ಮತ್ತು ಮುಖಂಡರಿಗೆ ಬೇಸರವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ನಾನು ನೀಡಿರುವ ಹೇಳಿಕೆಯಿಂದ ಗೊಂದಲ ಉಂಟಾಗಿದ್ದು ಈ ಗೊಂದಲವನ್ನು ನಿವಾರಣೆ ಮಾಡುವ ಹಿನ್ನೆಲೆಯಲ್ಲಿ ಒಂದೆರಡು ದಿನಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ ಸಮಗ್ರವಾಗಿ ವಿವರ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಯಾವುದೇ ಕಾರಣಕ್ಕೂ ದೇವೇಗೌಡರ ಸಾವನ್ನ ಬಯಸುವವನಲ್ಲ. ನನಗೂ ವಯಸ್ಸಾಗಿದೆ. ಎಲ್ಲರೂ ಒಂದು ದಿನ ಹೋಗುತ್ತಾರೆ. ಹಾಗೆಂದು ಅವರ ಸಾವನ್ನ ಬಯಸುವುದಿಲ್ಲ. ಆದರೂ ಇದನ್ನು ತಪ್ಪಾಗಿ ಅರ್ಥೈಸಲಾಗಿದೆ. ಹೀಗಾಗಿ ಗೊಂದಲ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.
ದೇವೇಗೌಡರ ಕುರಿತ ನನ್ನ ಹೇಳಿಕೆಯಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಭಿನ್ನ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ನಾನು ದೇವೇಗೌಡರ ಬಗ್ಗೆ ಹಾಗೆ ಹೇಳಿಲ್ಲ. ಆದರೂ ಎಚ್.ಡಿ. ಕುಮಾರಸ್ವಾಮಿ ನನ್ನ ವಿರುದ್ಧ ವೈಯಕ್ತಿಕ ದಾಳಿ ಮಾಡಿರುವುದು ಖಂಡನೀಯ ಎಂದಿದ್ದಾರೆ.